ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ಪಕ್ಷದ ಹಲವು ನಾಯಕರನ್ನು ಭೇಟಿಯಾಗಿ ಸಹಕಾರ ಕೋರಿದ್ದಾರೆ.
ಪಕ್ಷದ ನಾಯಕರ ವಿಶ್ವಾಸಗಳಿಸಲು ಮುಂದಾದ ಡಿಕೆಶಿ, ಹಲವು ನಾಯಕರ ಭೇಟಿ..! - ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು
ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಪಕ್ಷದ ಹಲವು ನಾಯಕರನ್ನು ಭೇಟಿಯಾಗಿ ಸಹಕಾರ ಕೋರಿದ್ದಾರೆ.
ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಶನಿವಾರ ಭೇಟಿ ನೀಡಿದರು. ಕೆಲಕಾಲ ದಿನೇಶ್ ಗುಂಡೂರಾವ್ ಹಾಗೂ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದರು. ನಂತರ ಸಂಜಯನಗರದಲ್ಲಿರುವ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿ ಶಾಲು ಹೊದಿಸಿ ಹೂಗುಚ್ಚ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನೇಮಕಕ್ಕೆ ಸಾಕಷ್ಟು ಮಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ, ಹಲವು ತಿಂಗಳಿಂದ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಆಯ್ಕೆ ವಿಳಂಬವಾಗಿತ್ತು.
ಹಂತ ಹಂತವಾಗಿ ಎಲ್ಲಾ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿರುವ ಡಿಕೆಶಿ ವಿಶ್ವಾಸ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ತಮ್ಮ ಸಹಕಾರ ಕೋರಿದ್ದರು. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.