ದೊಡ್ಡಬಳ್ಳಾಪುರ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಯಲಹಂಕ ವಿಧಾನಸಭಾ ಕ್ಷೇತ್ರದ ಡಿ. ಎಸ್. ಜಯಣ್ಣನವರನ್ನ ಆಯ್ಕೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿರುವುದು ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
ಯಲಹಂಕ ಕ್ಷೇತ್ರದ ಶಾಸಕ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ರವರು ಲಾಭಿ ನಡೆಸಿ ತಮ್ಮ ಕ್ಷೇತ್ರದ ಬೆಂಬಲಿಗನಿಗೆ ಅಧ್ಯಕ್ಷ ಸ್ಥಾನ ಕೊಡಿಸಿದ್ದಾರೆ ಎಂದು ದೊಡ್ಡಬಳ್ಳಾಪುರ ಬಿಜೆಪಿ ಕಾರ್ಯಕರ್ತರು ಆರೋಪಿಸಿ ಸಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಆಯ್ಕೆ ತಾಲೂಕಿನ 300 ಗ್ರಾಮಗಳ ಒಳಗೊಂಡಂತೆ ಯಲಹಂಕದ 30 ಗ್ರಾಮಗಳ ಅಭಿವೃದ್ಧಿಗೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಸ್ಥಾಪನೆ ಮಾಡಲಾಗಿದೆ. ಅದರಂತೆ ಹೆಚ್ಚು ಗ್ರಾಮ ಹೊಂದಿರುವ ದೊಡ್ಡಬಳ್ಳಾಪುರ ತಾಲೂಕಿಗೆ ಸಿಗಬೇಕಿದ್ದ ಅಧ್ಯಕ್ಷ ಸ್ಥಾನ ಪಕ್ಕದ ಯಲಹಂಕ ಕ್ಷೇತ್ರಕ್ಕೆ ಸಿಕ್ಕಿದ್ದು ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಅಧ್ಯಕ್ಷರ ಆಯ್ಕೆ ವಿಚಾರ ಕಾರ್ಯಕರ್ತರ ಗಮನಕ್ಕೆ ಬಾರದಂತೆ ನಡೆದಿದೆ. ತಕ್ಷಣವೇ ಸರ್ಕಾರ ಈ ಆದೇಶವನ್ನ ಹಿಂಪಡೆದು ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧ ಪಟ್ಟ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಬೇಕು, ಇಲ್ಲವಾದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆಯನ್ನು ಕಾರ್ಯಕರ್ತರು ನೀಡಿದ್ದಾರೆ.