ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಇಡಿ ಜಾರಿ ಮಾಡಿದ ಸಮನ್ಸ್ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, "ಭಾರತ್ ಜೋಡೋ ಯಾತ್ರೆ ಮತ್ತು ವಿಧಾನಸಭೆ ಅಧಿವೇಶನದ ನಡೆಯುತ್ತಿರುವ ಮಧ್ಯೆ ಇಡಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಆದರೆ, ಕಿರುಕುಳ ನೀಡಲೆಂದೇ ಈ ಸಮನ್ಸ್ ನೀಡಲಾಗಿದೆ. ಈ ಮೂಲಕ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದೆರಡು ದಿನಗಳಿಂದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಲ್ಲದೇ, ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಆಗಮಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ.