ಬೆಂಗಳೂರು: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದ್ದು, ಇವರೆಲ್ಲರೂ 'ವಿದ್ಯಾಗಮ' ಯೋಜನೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಡಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ವಿದ್ಯಾಗಮ ಯೋಜನೆ ಪರಿಪೂರ್ಣ-ಸುರಕ್ಷಿತವಾಗಿದ್ದು, ಅಪಪ್ರಚಾರ ಮಾಡಬಾರದು: ಸುರೇಶ್ ಕುಮಾರ್ ಮನವಿ ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ, ಪ್ರತಿ ಮಗುವೂ ಕಲಿಕಾ ವ್ಯಾಪ್ತಿಯಲ್ಲಿ ಬರುವಂತೆ ಯೋಜನೆ ಶಿಕ್ಷಕರು-ಮಕ್ಕಳ ನಿರಂತರ ಸಂಪರ್ಕ, ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಖಾತ್ರಿ, ಶಿಕ್ಷಕರು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು, ಆಡಳಿತ ಮಂಡಳಿಯವರು, ಸ್ವಯಂ ಸೇವಕರು, ಪೋಷಕರು ಹಾಗೂ ಸಮುದಾಯದ ಎಲ್ಲಾ ಭಾಗೀದಾರ ಸಕ್ರಿಯ ತೊಡಗಿಸುವಿಕೆಯಂತಹ ಸದುದ್ದೇಶಗಳೊಂದಿಗೆ ಆರಂಭವಾಗಿರುವುದು ವಿದ್ಯಾಗಮ ಕಾರ್ಯಕ್ರಮ.
ಇದನ್ನ ನಿರ್ವಹಿಸುವ ಎಲ್ಲ ಶಿಕ್ಷಕರು, ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಾಹಿತಿ-ತರಬೇತಿಯನ್ನು ಪಡೆದು ಅವರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ ವಿವಿಧ ತರಗತಿಗಳ ಒಟ್ಟು 49.34 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು ‘ವಿದ್ಯಾಗಮ’ದ ಪ್ರಯೋಜನವನ್ನು ಪಡೆಯುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಎಲ್ಲಿಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಒಂದು ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು, ಅವರು ಈಗ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಆರೋಗ್ಯದಿಂದಿದ್ದಾರೆ. ಈ ಅವಧಿಯಲ್ಲಿ ಶಾಲೆಯ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗುಲಿರುವುದಿಲ್ಲ. ಸೆ. 22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ‍್ಯಾಂಡಮ್ ಆಗಿ ಸುಮಾರು 203 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದಾಗ 4 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಈ ಸೋಂಕು ತಗುಲಿಸಿಕೊಂಡಿರುವುದು ಸಾಧ್ಯವಿಲ್ಲ ಎಂಬ ಅಂಶಗಳನ್ನು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ದೃಢಪಡಿಸಿದ್ದಾರೆ. ಹಾಗಾಗಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಲಿಕೆಯಲ್ಲಿ ಮುಂದುವರೆದಿದ್ದು, ವಿದ್ಯಾಗಮದ ಕಾರಣ ಈ ಸೋಂಕು ತಗುಲಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂಹಕ್ಕೆ ಎಸಗುವ ಅನ್ಯಾಯವಾಗುತ್ತದೆ. ಈಗಾಗಲೇ ಹೆಚ್ಚುತ್ತಿರುವ ಸಾಮಾಜಿಕ ಪಿಡುಗುಗಳ ನಡುವೆ ವಿದ್ಯಾರ್ಥಿಗಳನ್ನು ಸುರಕ್ಷಿತವಾದ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ದುರುಪಯೋಗವಾಗುತ್ತಿಲ್ಲ. ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ. ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ ಎಂದಿರುವ ಸಚಿವರು, ವಿದ್ಯಾಗಮದಂತಹ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಸಲ್ಲದೆಂದು ಸಚಿವರು ಮನವಿ ಮಾಡಿದ್ದಾರೆ.