ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದಿರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ಗಳಿಗೆ ಚುನಾವಣೆ ನಡೆಸುವ ಸಂಬಂಧ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪಟ್ಟಿ ಅಂತಿಮಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 12 ವಾರಗಳ ಗಡುವು ವಿಧಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ತ್ವರಿತವಾಗಿ ಪಟ್ಟಿ ನಿಗದಿ ಮಾಡುವಂತೆ ಹಾಗೂ 12 ವಾರಕ್ಕಿಂತ ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.
ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪೀಠಕ್ಕೆ ಮಾಹಿತಿ ನೀಡಿ, ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಕ್ಷೇತ್ರ ಮೀಸಲಾತಿ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಕಾರ್ಯ ಪೂರ್ಣಗೊಳಿಸಲು 12 ವಾರ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೇ, ಈ ಕುರಿತ ಮೆಮೊವನ್ನು ಪೀಠಕ್ಕೆ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲರಾದ ಕೆ.ಎನ್ ಫಣೀಂದ್ರ, ರಾಜ್ಯ ಸರ್ಕಾರ ಇದಕ್ಕಿಂತ ಹೆಚ್ಚಿನ ಸಮಯ ಕೇಳಬಾರದು ಎಂದು ಪೀಠಕ್ಕೆ ಕೋರಿದರು. ಈ ಹಿನ್ನೆಲೆಯಲ್ಲಿ ಪಟ್ಟಿಗಳನ್ನು ಸಿದ್ಧಪಡಿಸಲು ಸರ್ಕಾರ 12 ವಾರಕ್ಕಿಂಗ ಹೆಚ್ಚು ಸಮಯ ಕೇಳಬಾರದು ಎಂದು ಗಡುವು ವಿಧಿಸಿ ವಿಚಾರಣೆ ಮುಂದೂಡಿತು.