ಕರ್ನಾಟಕ

karnataka

ETV Bharat / city

ಸೋಂಕು ಹೆಚ್ಚಿರುವ 8 ಜಿಲ್ಲೆ ಅನ್​ಲಾಕ್ ಬಗ್ಗೆ ಸಂಜೆ ನಿರ್ಧಾರ - Unlocked Karnataka

ಸೋಂಕು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Bangalore
ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್

By

Published : Jun 10, 2021, 2:06 PM IST

Updated : Jun 10, 2021, 2:14 PM IST

ಬೆಂಗಳೂರು:ಜೂನ್‌ 14ರಿಂದ ರಾಜ್ಯದಲ್ಲಿ ಅನ್​​​​ಲಾಕ್ ಪ್ರಕ್ರಿಯೆ ಆರಂಭಗೊಳ್ಳುವುದು ಬಹುತೇಕ ಖಚಿತವಾಗಿದೆ. ಸೋಂಕು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.

ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ. ಈ ಜಿಲ್ಲೆಗಳಲ್ಲಿ ಸೋಂಕಿನ ಇಳಿಕೆಯ ಪ್ರಮಾಣ ಕಡಿಮೆ ಇದೆ. ಆದ್ದರಿಂದ ಪಾಸಿಟಿವಿಟಿ ದರವನ್ನು ಶೇ 5ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಿಎಂ ಸೂಚಿಸಿದರು. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಜೊತೆಗೆ ಮೈಸೂರು ಹೊರತುಪಡಿಸಿ, ಇತರ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿರುವ ಕುರಿತು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಅತಿ ಹೆಚ್ಚು ಅಂದರೆ, ಸರಾಸರಿ ಶೇಕಡಾ 25.17 ಪಾಸಿಟಿವಿಟಿ ದರ ದಾಖಲಾಗಿದೆ. ಮೈಸೂರಿನಲ್ಲಿಯೂ ಶೇಕಡಾ 22 ರಷ್ಟಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ಸೋಂಕಿತರಿಗೆ ಸರಾಸರಿ ಕೇವಲ 6.1 ಸಂಪರ್ಕಿತರನ್ನು ಪತ್ತೆಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 19 ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವುದನ್ನು ಖಾತರಿ ಪಡಿಸಬೇಕು. ಜನರು ನಿರ್ಬಂಧಗಳನ್ನು ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಮೈಕ್ರೋ ಕಂಟೈನ್ಮೆಂಟ್​ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಒತ್ತು ನೀಡಬೇಕು. ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾಗುವಂತೆ ಮಾಡಿ ಪಾಸಿಟಿವಿಟಿ ರೇಟ್ ಶೇಕಡಾ 5ರ ಒಳಗಿರುವಂತೆ ಖಾತರಿ ಪಡಿಸಬೇಕು ಎಂದು ಸಿಎಂ ಸೂಚಿಸಿದರು.

ಬೆಳಗಾವಿ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಜಾಸ್ತಿ ಮಾಡಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಶೇ 30ರಷ್ಟು ನಡೆಸಲು ಸೂಚಿಸಲಾಯಿತು. ಉಳಿದ ಶೇ 70ರಷ್ಟು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಬೇಕು. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಿಸಬೇಕು. ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ 24 ಗಂಟೆಗಳ ಒಳಗೆ ನೀಡಬೇಕು. ಸೋಂಕಿತರ ಆರೋಗ್ಯ ಸ್ಥಿತಿಗನುಗುಣವಾಗಿ ವರ್ಗೀಕರಣ ಮಾಡುವ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು.

ಮೈಸೂರು ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ತೀವ್ರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್​ಗಳಿಗೆ ದಾಖಲಿಸಬೇಕು. ಸಂಪರ್ಕಿತರ ಟ್ರೇಸಿಂಗ್ ಹೆಚ್ಚಿಸಲು ಸೂಚಿಸಿದ ಸಿಎಂ, ಎಲ್ಲ ಜಿಲ್ಲೆಗಳಲ್ಲಿ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಸೂಚಿಸಿದರು.

ಕೆಲವು ಚಟುವಟಿಕೆಗಳನ್ನು ಹೊರತುಪಡಿಸಿ, ನಿರ್ಬಂಧಗಳನ್ನು ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದು, ಈ ಬಗ್ಗೆ ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದಿ:ಇದು ಕೋವಿಡ್‌ ಕಾಲ.. ಯಾವ ವಾಹನದಲ್ಲಿ ಪ್ರಯಾಣ ಹೆಚ್ಚು ಸುರಕ್ಷಿತ? ಈ ಅಧ್ಯಯನ ವರದಿ ತಪ್ಪದೆ ಓದಿ..

Last Updated : Jun 10, 2021, 2:14 PM IST

ABOUT THE AUTHOR

...view details