ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಾದಿತ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಅದಕ್ಕೆ ಸಚಿವ ಸಂಪುಟವೂ ಒಪ್ಪಿಗೆ ನೀಡಿದೆ. ಸರ್ಕಾರದ ನಿರ್ಧಾರವನ್ನು ರೈತ ಸಂಘ ಸ್ವಾಗತಿಸುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಈಗ ರಾಜ್ಯದಲ್ಲೂ ಆ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಸುವರ್ಣಸೌಧವನ್ನು ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲೂ ಕಾಯ್ದೆಗಳನ್ನು ಹಿಂಪಡೆಯುವ ತನಕ ರಾಜ್ಯಾದ್ಯಂತ ಹೆದ್ದಾರಿ ತಡೆ ಚಳವಳಿ ಮುಂದುವರೆಸುತ್ತೇವೆ. ರೈತರ ಬೇಡಿಕೆಗಳಾದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸುವುದು, ವಿದ್ಯುತ್ ಖಾಸಗೀಕರಣಕ್ಕ ತಡೆ, ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು. ಇದರ ಅಂಗವಾಗಿ ನ.26ರಂದು ಹೆದ್ದಾರಿ ತಡೆ ಪ್ರತಿಭಟನೆ ನಡೆಸಿ, ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದರು.