ಬೆಂಗಳೂರು:ಜೆಡಿಎಸ್ ಶಾಸಕರನ್ನು ಸೆಳೆದು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ. ಅಲ್ಲದೇ, ಜೆಡಿಎಸ್, ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
'ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್ ಬಗ್ಗೆ ಮಾತನಾಡುತ್ತೀರಾ' ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ ಬಿಡ್ತೀನಿ ಅಂದಿದ್ದು ನೆನಪಿದೆಯಾ?ಕಾಂಗ್ರೆಸ್ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಪ್ರತಿಯೊಂದಕ್ಕೂ ಈ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ, ಅದೇ ಸರ್ಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ಜಪ ಮಾಡುತ್ತೀರಾ ಸಿದ್ದರಾಮಯ್ಯ ಎಂದು ಕುಟುಕಿದ್ದಾರೆ.