ಬೆಂಗಳೂರು: ದಪ್ಪ ಚರ್ಮದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆ ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳೆದ ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ 25 ರೂ. ಆಸುಪಾಸಿನಲ್ಲಿ ಮಾರಾಟವಾಗಬೇಕಿತ್ತು ಎಂದರು.
ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ. ದೇಶದ ಹಣಕಾಸು ಪರಿಸ್ಥಿತಿ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಟೀಕಿಸಿದರು. ಲಾಕ್ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ.