ಕರ್ನಾಟಕ

karnataka

By

Published : Jun 15, 2021, 2:01 PM IST

ETV Bharat / city

ಶುಲ್ಕ ವಿಚಾರದಲ್ಲಿ ಮಕ್ಕಳ ಪೋಷಕರಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಿ: ಸಿಎಂಗೆ ಸಿದ್ದು ಪತ್ರ

ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು-ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ-ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

BS Yadiyurappa
Siddaramaiah

ಬೆಂಗಳೂರು:ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಬರೆದ ಪತ್ರ

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೊನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳ ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು-ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ-ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ. 30ರಷ್ಟು ವಿನಾಯ್ತಿ ನೀಡಿ ಶೇ. 70ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ ಎಂದಿದ್ದಾರೆ.

ಲಾಬಿಗೆ ಮಣಿದ ತಕ್ಷಣ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯದ ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ? ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಜೂ. 15ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ನಿಲುವು ಸ್ಪಷ್ಟಪಡಿಸಿ

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ. 30ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ. ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

ABOUT THE AUTHOR

...view details