ಬೆಂಗಳೂರು:ಬಹು ಅಂಗಾಂಗ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ವಿಜಯಕೃಷ್ಣ (71) ಇಂದು ಬೆಳಗ್ಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದ ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನ... ಸಿಎಂ ಬಿಎಸ್ವೈ ಸಂತಾಪ - CM BSY tweet
ಕರ್ನಾಟಕ ಎರಡು ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ವಿಜಯಕೃಷ್ಣ 71ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
1949ರ ಅಕ್ಟೋಬರ್ 12ರಂದು ಜನಿಸಿದ ವಿಜಯಕೃಷ್ಣ ತಮ್ಮ 15 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದಲ್ಲಿ ಲೆಫ್ಟ್ ಆರ್ಮ್ ಸ್ಪಿನ್ನರ್ ಹಾಗೂ ಲೆಫ್ಟ್ ಹ್ಯಾಂಡ್ ಬ್ಯಾಟ್ಸ್ಮನ್ ಆಗಿ 80 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ 2000 ರನ್ ಗಳಿಸಿದ ಮತ್ತು 194 ವಿಕೆಟ್ ಪಡೆದ ಖ್ಯಾತಿ ಅವರದ್ದಾಗಿದೆ. ಅಲ್ಲದೇ ಕರ್ನಾಟಕ ಎರಡು ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ವಿಜಯಕೃಷ್ಣ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಸಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, "ಕರ್ನಾಟಕ 2 ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನದಿಂದ ನಾಡು ಒಬ್ಬ ಅತ್ಯುತ್ತಮ ಕ್ರಿಕೆಟ್ ಆಟಗಾರನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ" ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ ಎಂದು 'ಸಿಎಂ ಆಫ್ ಕರ್ನಾಟಕ' ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.