ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎಂ. ರಘುಪತಿ ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಗುಣಮುಖರಾಗಿ ನಿವಾಸಕ್ಕೆ ಹಿಂದಿರುಗಿದ್ದ ಅವರು ಇಂದು ಬೆಳಗಿನ ಜಾವ 3 ಗಂಟೆಗೆ ತಮ್ಮ ಮಲ್ಲೇಶ್ವರದ ನಿವಾಸದಲ್ಲಿ ನಿಧನರಾಗಿದ್ದಾರೆ.
ಇಂದು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಲಾಗಿದೆ. ಭಾನುವಾರ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಅಗಲಿಕೆಯಿಂದ ಜನತಾ ಪರಿವಾರದ ಇನ್ನೊಂದು ಹಿರಿಯ ಕೊಂಡಿ ಕಳಚಿದಂತಾಗಿದೆ. ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ಟಿ ರಾಮರಾವ್ಗೆ ಆತ್ಮೀಯರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.
ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ರಘುಪತಿ ಕಾರ್ಯನಿರ್ವಹಿಸಿದ್ದರು. ಮಲ್ಲೇಶ್ವರ, ಶಿವಾಜಿನಗರ ವಿಧಾನಸಭೆ ಕ್ಷೇತ್ರಗಳಿಂದ ಶಾಸಕರಾಗಿಯೂ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.