ಬೆಂಗಳೂರು:ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡುವ ಸಂಪೂರ್ಣ ಅಧಿಕಾರ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ನೀಡಲಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ತಿಳಿಸಿದ್ದಾರೆ.
ಪರಿಷತ್ ಅಭ್ಯರ್ಥಿ ಆಯ್ಕೆಯ ಸಂಪೂರ್ಣ ಅಧಿಕಾರ ದೇವೇಗೌಡರಿಗೆ: ಬಂಡೆಪ್ಪ ಕಾಶಂಪೂರ್ - Former Minister Bandeppa Kashampur
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡುವ ಸಂಪೂರ್ಣ ಅಧಿಕಾರ ಹೆಚ್.ಡಿ.ದೇವೇಗೌಡರಿಗೆ ನೀಡಲಾಗಿದ್ದು, ಅವರು ಅಂತಿಮವಾಗಿ ಯಾವುದೇ ತೀರ್ಮಾನ ತೆಗೆದುಕೊಂಡರೂ ಬದ್ಧರಾಗಿರುವುದಾಗಿ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಮಾಹಿತಿ ನೀಡಿದ ಅವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲರೂ ದೇವೇಗೌಡರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ. ಅವರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಜೆಡಿಎಸ್ ಪಕ್ಷದಿಂದ ಒಬ್ಬ ಅಭ್ಯರ್ಥಿಗೆ ಪರಿಷತ್ ಪ್ರವೇಶಿಸಲು ಅವಕಾಶವಿದ್ದು, ಸುಮಾರು 29 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಹೊರತುಪಡಿಸಿ 10ರಿಂದ 15 ಮಂದಿ ಆಕಾಂಕ್ಷಿಗಳಿದ್ದು, ಒಟ್ಟು 35 ಮಂದಿ ಆಕಾಂಕ್ಷಿಗಳಿದ್ದಾರೆ. ಎಲ್ಲವನ್ನೂ ಪರಿಶೀಲಿಸಿ ದೇವೇಗೌಡರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ರಾಜ್ಯಸಭೆ ಸದಸ್ಯ ಕುಪೇಂದ್ರ ರೆಡ್ಡಿ, ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತಾ, ಕೋನರೆಡ್ಡಿ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಈ ಹಿಂದೆ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ನೀಡಿರುವ ಉದಾಹರಣೆಗಳಿವೆ. ಎಲ್ಲಾ ಪಕ್ಷಗಳು ಕೊನೆ ಕ್ಷಣದಲ್ಲಿ ಹೆಸರು ಘೋಷಣೆ ಮಾಡುತ್ತವೆ. ಕೇವಲ ನಮ್ಮ ಪಕ್ಷದಲ್ಲಿ ಅಷ್ಟೇ ಅಲ್ಲ ಎಂದು ಸಮಜಾಯಿಷಿ ನೀಡಿದರು.