ಬೆಂಗಳೂರು:ಕಳೆದ 40 ದಿನಗಳಿಂದ ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 97 ವರ್ಷದ ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಆರ್.ಎಲ್ ಜಾಲಪ್ಪ ನಿನ್ನೆ ನಿಧನರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ.
ರಾತ್ರಿಯೇ ಅವರ ಪಾರ್ಥಿವ ಶರೀರವನ್ನ ಸ್ವಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದ್ದು, ತೂಬುಗೆರೆಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಇಂದು ಸಂಜೆ ನಾಲ್ಕು ಗಂಟೆಗೆ ತೂಬುಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಕ್ಯಾಂಪಸ್ನಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.
ಇದನ್ನೂ ಓದಿರಿ:ಕೇಂದ್ರ ಮಾಜಿ ಸಚಿವ ಆರ್ ಎಲ್ ಜಾಲಪ್ಪ ವಿಧಿವಶ... ಅಂತಿಮ ದರ್ಶನ ಪಡೆದ ಸಿಎಂ
ನಿನ್ನೆ ಕೋಲಾರದಲ್ಲಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ನಾಲ್ಕು ಸಲ ಲೋಕಸಭೆಗೆ ಆಯ್ಕೆಯಾಗಿದ್ದ ಜಾಲಪ್ಪ ಅವರು ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಇವರು, ಬಳಿಕ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿಯೂ ಆಯ್ಕೆ ಆಗಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆ ಜೊತೆಗೆ ಮೂತ್ರಪಿಂಡ ವೈಫಲ್ಯ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ 7:30ಕ್ಕೆ ನಿಧನರಾಗಿದ್ದಾರೆ. ಹಿರಿಯ ರಾಜಕೀಯ ಮುಖಂಡನ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.