ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಕ್ಷೀರಕ್ರಾಂತಿ ನಡೆದಿದ್ದು, ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಇದೀಗ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.
ಇಂದು ಆರಂಭವಾದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾ ಕಾಲಘಟ್ಟದಲ್ಲೂ ರಾಜ್ಯ ಅರ್ಥಿಕವಾಗಿ ಸಬಲವಾಗಿದ್ದು, ದೇಶದ ಒಟ್ಟು ಆಂತರಿಕ ಉತ್ಪಾದನೆಗೆ ಶೇ. 8 ರಷ್ಟು ಪಾಲು ನೀಡಿದೆ ಎಂದು ಸಮರ್ಥಿಸಿಕೊಂಡರು. ಮುಂದಿನ ಐದು ವರ್ಷಗಳಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಐದು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದ್ದು, ಆ ಮೂಲಕ ಇಪ್ಪತ್ತು ಲಕ್ಷ ಮಂದಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದರು.
ಕೋವಿಡ್ ಪರಿಸ್ಥಿತಿಯನ್ನು ನಾವು ಪರಿಣಾಮಕಾರಿಯಾಗಿ ಎದುರಿಸಿದ್ದು, 248 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿ ಒಂದು ಲಕ್ಷದ ಮೂವತ್ತಾರು ಸಾವಿರ ಕೊರೊನಾ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗಿದೆ. ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ಕಾರ್ಮಿಕರು, ಆಟೋ ಚಾಲಕರು, ಮಡಿವಾಳರು, ನೇಕಾರರು, ಕ್ಷೌರಿಕರನ್ನು ಒಳಗೊಂಡಂತೆ ಅರವತ್ಮೂರು ಲಕ್ಷಕ್ಕೂ ಹೆಚ್ಚು ಮಂದಿಗೆ 5,372 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಮುನ್ನೋಟ :ರಾಜ್ಯವನ್ನು ಹಸಿವು ಮತ್ತು ರಕ್ತಹೀನ ಮುಕ್ತವನ್ನಾಗಿಸಲು ಮುನ್ನೋಟ 2030 ಯೋಜನೆಯನ್ನು ತಯಾರಿಸಲಾಗಿದೆ ಎಂದು ಹೇಳಿದ ಗವರ್ನರ್, ವಿಶ್ವಬ್ಯಾಂಕ್ ನೆರವಿನಿಂದ 2027 ಒಳಗೆ ರಾಜ್ಯದ 21 ಜಿಲ್ಲೆಗಳಲ್ಲಿ ಮಳೆನೀರು ಕೊಯ್ಲು ನಿರ್ಮಿತಿಗಳನ್ನು ರೂಪಿಸಲು ತೀರ್ಮಾನಿಸಲಾಗಿದೆ. ಮಂಡ್ಯ, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೊಪ್ಪಳ, ಬೆಳಗಾವಿ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ಮುನ್ನೂರು ಕೋಟಿ ರೂಪಾಯಿಗಳ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
14,971 ಮೆಗಾ ವ್ಯಾಟ್ ಸಂಚಿತ ಸ್ಥಾಪಿತ ಸಾಮರ್ಥ್ಯದೊಂದಿಗೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶದ ನಂಬರ್ 1 ರಾಜ್ಯವಾಗಿ ಹೊರಹೊಮ್ಮಿದ್ದೇವೆ. ರಾಜ್ಯದ 150 ಕೈಗಾರಿಕಾ ಸಂಸ್ಥೆಗಳ ಉನ್ನತೀಕರಣಕ್ಕಾಗಿ ಟಾಟಾ ಟೆಕ್ನಲಾಜಿ ಲಿಮಿಟೆಡ್ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯಪಾಲರು ವಿವರಿಸಿದರು.
ಹೃದ್ರೋಗಿಗಳಿಗಾಗಿ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸುವ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಈ ಆಸ್ಪತ್ರೆ ಮುನ್ನೂರು ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1,132 ಕೋಟಿ ರೂ. ಒದಗಿಸಲಾಗಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ 3.15 ಲಕ್ಷ ಪ್ರತ್ಯೇಕ ಗೃಹ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಗೆ ಇದುವರೆಗೆ ಏಳು ನಗರಗಳಿಗೆ 400 ಕೋಟಿ ರೂಪಾಯಿ ಒದಗಿಸಲಾಗಿದ್ದು, ಇನ್ನೂ 6,233 ಕೋಟಿ ರೂಪಾಯಿಗಳ ಯೋಜನೆ ಪ್ರಗತಿಯಲ್ಲಿದೆ. ಇದೇ ರೀತಿ 4,755 ಕೋಟಿ ರೂಪಾಯಿ ವೆಚ್ಚ ಮಾಡಿ 3,459 ಕಿಲೋ ಮೀಟರ್ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದ ಅವರು, ಅನುಸೂಚಿತ ಜಾತಿ ಮತ್ತು ಪಂಗಡಗಳ ಜನರಿರುವ ಕಾಲೋನಿಗಳಲ್ಲಿ 447 ಕಿಲೋ ಮೀಟರ್ಗಳಷ್ಟು ಕಾಂಕ್ರೀಟು ರಸ್ತೆಗಳನ್ನು ನಿರ್ಮಿಸಲಾಗಿದೆ. 9,601 ಕಿಲೋ ಮೀಟರ್ ರಸ್ತೆಗಳನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. 15,510 ಕಿಲೋ ಮೀಟರ್ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಿಸಿದರು.
ಮುಖ್ಯಮಂತ್ರಿಗಳ ಒಂದು ಲಕ್ಷ ಗೃಹ ನಿರ್ಮಾಣ ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ 46,449 ಮನೆಗಳ ಪೈಕಿ 31,382 ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಈ ವರ್ಷ ಕೈಗಾರಿಕಾ ಕ್ಷೇತ್ರದಲ್ಲಿ 53,295 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1.54 ಲಕ್ಷ ಉದ್ಯೋಗವನ್ನು ಸೃಷ್ಟಿಸುವ 366 ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
9 ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಹ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ 710 ಕೋಟಿ ರೂಪಾಯಿಗಳಷ್ಟು ಹಣವನ್ನು ಪರಿಹಾರವಾಗಿ ಬಿಡುಗಡೆ ಮಾಡಲಾಗಿದೆ. ಇದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಗಣನೀಯ ಸಾಧನೆ ಮಾಡಿದ್ದು, ವಿವಿಧ ಅಭಿವೃದ್ದಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ ಎಂದು ರಾಜ್ಯಪಾಲರು ವಿವರ ನೀಡಿದರು.