ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ (H D Devegowda) ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ದೇವೇಗೌಡ, 'ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಕಾನೂನಿನ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಪ್ರತಿರೋಧ ತೋರಿದ ಎಲ್ಲ ರೈತರಿಗೆ ನನ್ನ ನಮನ' ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಟ್ವೀಟ್ ಮಾಡಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯವಾಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳನ್ನು ಏಕಪಕ್ಷೀಯವಾಗಿ ಜಾರಿ ಮಾಡಲಾಗಿತ್ತು. ಈಗ ಏಕಾಏಕಿ ರದ್ದು ಮಾಡಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.