ಕರ್ನಾಟಕ

karnataka

ETV Bharat / city

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಕೋರಿ ಅರ್ಜಿ : ನೋಟಿಸ್ ಜಾರಿಗೆ ಆದೇಶಿಸಿದ ಹೈಕೋರ್ಟ್ - ಅರ್ಜಿ ಮರು ವಿಚಾರಣೆ ನಡೆಸಲು ಸೂಚಿಸಿದ್ದ ಸುಪ್ರೀಂಕೋರ್ಟ್​

ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿರುವ ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅಸಿಂಧು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮರುವಿಚಾರಣೆ ಆರಂಭಿಸಿರುವ ಹೈಕೋರ್ಟ್, ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿಗೊಳಿಸಲು ಆದೇಶಿಸಿದೆ..

high court
ಹೈಕೋರ್ಟ್

By

Published : Jan 28, 2022, 8:16 PM IST

ಬೆಂಗಳೂರು :ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿರುವ ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅಸಿಂಧು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮರು ವಿಚಾರಣೆ ಆರಂಭಿಸಿರುವ ಹೈಕೋರ್ಟ್, ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿಗೊಳಿಸಲು ಆದೇಶಿಸಿದೆ.

ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಎ. ಮಂಜು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು. ಅರ್ಜಿ ಸಂಬಂಧ ಕೆಲಕಾಲ ವಾದ ಆಲಿಸಿದ ಪೀಠ ಪ್ರತಿವಾದಿಗಳೆಲ್ಲರಿಗೂ ಹ್ಯಾಂಡ್ ಸಮನ್ಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಅಕ್ರಮ ಎಸಗಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿಯ ಕುರಿತು ನಿಖರ ಮಾಹಿತಿ ನೀಡಿಲ್ಲ. ಬದಲಿಗೆ ಕಡಿಮೆ ಆಸ್ತಿ ತೋರಿಸಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಎ.ಮಂಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿದಾರರು ಸಲ್ಲಿಸಿರುವ ರಿಟ್ ಪರಿಪೂರ್ಣವಾಗಿಲ್ಲ. ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಿದ ನಂತರವೂ ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ತಕರಾರು ಅರ್ಜಿಗಳು ಸಲ್ಲಿಕೆಯಾದಾಗ ಲೋಪಗಳನ್ನು ಪರಿಗಣಿಸಿ ಅರ್ಜಿ ವಜಾಗೊಳಿಸಬಾರದು. ಆರೋಪಿತರ ವಿರುದ್ಧದ ಆರೋಪಗಳನ್ನು ಪರಿಶೀಲಿಸಿ ಸೂಕ್ತ ಆದೇಶ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು.

ಅಲ್ಲದೇ, ಅರ್ಜಿಯಲ್ಲಿನ ಲೋಪಗಳನ್ನು ಸರಿಪಡಿಸಿ ಅರ್ಜಿದಾರರು ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು. ಹೈಕೋರ್ಟ್ ಅದನ್ನು ಪರಿಗಣಿಸಿ ಅರ್ಜಿಯನ್ನು ಮರು ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು 2020ರ ಡಿಸೆಂಬರ್ 13ರಂದು ನಿರ್ದೇಶಿಸಿತ್ತು. ಅದರಂತೆ ಹೈಕೋರ್ಟ್ ಚುನಾವಣಾ ತಕರಾರು ಅರ್ಜಿಯನ್ನು ಮರು ವಿಚಾರಣೆ ನಡೆಸುತ್ತಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details