ಬೆಂಗಳೂರು: ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ನಿಯಮ ರೂಪಿಸದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತಂತೆ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ವಿವರಣೆ ನೀಡುವಂತೆ ಸರ್ಕಾರಕ್ಕೆ ತಾಕೀತು:ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶ ನೀಡಿ ಹಲವು ವರ್ಷ ಕಳೆದರೂ ಈವರೆಗೂ ಏಕೆ ರಾಜ್ಯದಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ನಾಗರಿಕ ಸೇವಾ ಮಂಡಳಿ ರಚನೆ ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ. ಅರ್ಜಿದಾರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.
ಸುಪ್ರೀಂಕೋರ್ಟ್ ನಿರ್ದೇಶನ: ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳು ದಕ್ಷತೆ ಹಾಗೂ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಬೇಕು. ಆದರೆ, ವರ್ಗಾವಣೆಗೆ ಕನಿಷ್ಠ ಅವಧಿ ನಿಗದಿ ಮಾಡದ ಕಾರಣ ರಾಜಕಾರಣಿಗಳು ಇವರನ್ನು ಮನಬಂದಂತೆ ವರ್ಗಾವಣೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರಕ್ಕೂ ದಾರಿಯಾಗಿದೆ.