ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ. ದೇಶದ ಯಾವ ಭಾಗದಲ್ಲೂ ಇಂಥ ಪ್ರಕರಣ ನಡೆಯಬಾರದು ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ದಾಳಿಯನ್ನು ಖಂಡಿಸಿದ್ದಾರೆ.
ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಸಂಬಂಧ 150 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಿಜವಾದ ಅಪರಾಧಿಗಳು ಎಷ್ಟು? ಎಂಬುದನ್ನು ಪತ್ತೆ ಮಾಡಬೇಕು. ತಪ್ಪಿತಸ್ಥರನ್ನು ಮಾತ್ರ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಅಂತವರ ವಿರುದ್ಧ ನಿರ್ದಾಕ್ಷ್ಯಿಣ್ಯ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಮನವಿ ಮಾಡಿದರು.
ಪ್ರಕರಣವನ್ನು ಸಿಬಿಐಗೆ ವಹಿಸಿ ಅಂತ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ. ಈಗಿರುವ ಪೊಲೀಸ್ ಆಯುಕ್ತ ಕಮಲ್ ಪಂತ್ ಸಿಬಿಐನಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ತಾರತಮ್ಯ ಮಾಡುವುದಿಲ್ಲ ಎಂಬುದು ನನ್ನ ಭಾವನೆ. ಅಂತಿಮ ನಿರ್ಧಾರವನ್ನು ಸರ್ಕಾರವೇ ತೆಗೆದುಕೊಳ್ಳಲಿ. ನಿಜವಾದ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಶಾಸಕರ ಮನೆ ಸುಟ್ಟಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗಬೇಕು. ಆಗಿರುವ ಆಸ್ತಿಪಾಸ್ತಿ ನಷ್ಟದ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಶಾಸಕರಿಗೆ ಧೈರ್ಯ ತುಂಬುವ ಕೆಲಸಕ್ಕೆ ಸರ್ಕಾರ ಮುಂದಾಗಬೇಕು ಎಂದು ಹೆಚ್ಡಿಡಿ ಸಲಹೆ ನೀಡಿದರು.