ಬೆಂಗಳೂರು:ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.