ಬೆಂಗಳೂರು/ಹಾಸನ:ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಹಾಸನದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣ, ಮಂಡ್ಯದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಇಂದು ನಡೆದ ಹಾಸನ ಜಿಲ್ಲಾ ಜೆಡಿಎಸ್ ಸಮಾವೇಶದ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಎಂಎಲ್‌ಸಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಕೊನೆಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಯ ಕಣಕ್ಕೆ ಧುಮುಕಿದ್ದಾರೆ. ಇಂದು ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಎಲ್ಲಾ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಒಮ್ಮತದ ಅಭಿಪ್ರಾಯದ ಮೇರೆಗೆ ಅಭ್ಯರ್ಥಿ ಘೋಷಣೆಯಾಗಿದೆ. ಇನ್ನು ನಾಳೆ ಮಧ್ಯಾಹ್ನ 12.15ರ ನಂತರ ನಾಮಪತ್ರ ಸಲ್ಲಿಸಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಮಾಹಿತಿ ನೀಡಿದ್ದಾರೆ.
ದೇವೇಗೌಡರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ
ವೃತ್ತಿಯಲ್ಲಿ ವೈದ್ಯರಾಗಿರುವ ಸೂರಜ್ ರೇವಣ್ಣ ಎಂಎಲ್‌ಸಿ ಚುನಾವಣೆ ಅಭ್ಯರ್ಥಿಯಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ. ಸೂರಜ್ ರೇವಣ್ಣ ಅವರಿಗೆ ಟಿಕೆಟ್ ನೀಡುವ ಮೂಲಕ ದೇವೇಗೌಡರ ಕುಟುಂಬದ ಮೊತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಇದು ಜಿಲ್ಲೆಯಲ್ಲಿ ಮತ್ತೊಮ್ಮೆ ಕುಟುಂಬ ರಾಜಕಾರಣದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಬಹುತೇಕರು ಈಗಾಗಲೇ ರಾಜಕೀಯದಲ್ಲಿ ಪ್ರಭಾವಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇದೀಗ ಇದೇ ಕುಟುಂಬದ ಮತ್ತೊಂದು ಕುಡಿಗೆ ಅವಕಾಶ ನೀಡುವ ಬದಲು, ಕಾರ್ಯಕರ್ತರನ್ನು ಮೇಲೆತ್ತಲು ಪ್ರಯತ್ನಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.
ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಸದಸ್ಯರಾದರೆ, ಮಕ್ಕಳಾದ ಹೆಚ್.ಡಿ.ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಶಾಸಕರಾಗಿದ್ದಾರೆ. ಅಲ್ಲದೇ ಮೊಮ್ಮಗ ಪ್ರಜ್ವಲ್ ರೇವಣ್ಣ ಲೋಕಸಭಾ ಸದಸ್ಯರಾಗಿದ್ದು, ಮತ್ತೊಬ್ಬ ಸೊಸೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾಗಿದ್ದು, ಕುಟಂಬದಲ್ಲಿ ಸದ್ಯ 6 ಮಂದಿ ರಾಜಕೀಯದಲ್ಲಿರುವುದು ಬಿಜೆಪಿ ಮತ್ತು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸಿಕೊಂಡು ಚುನಾವಣೆ ಪ್ರಚಾರ ಮಾಡಲು ಸಜ್ಜಾಗಿದೆ.