ಬೆಂಗಳೂರು: ತಮಿಳುನಾಡಿನ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಜುಲೈ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ 4 ದಿನ ಭಾರಿ ಮಳೆ... ಯಾವ ಜಿಲ್ಲೆಗಳಲ್ಲಿ ಅಲರ್ಟ್? - ಕರ್ನಾಟಕದಲ್ಲಿ ಮಳೆ ಸಾಧ್ಯತೆ
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 6ರಿಂದ 9ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಜುಲೈ 6ರಂದು ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 6 ಮತ್ತು 7ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಲವು ಸ್ಥಳಗಳಲ್ಲಿ ವ್ಯಾಪಕ ಮಳೆ: ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಹೊನಕೆರೆಯಲ್ಲಿ 10 ಸೆಂ.ಮೀ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 8 ಸೆಂ.ಮೀ, ತುಮಕೂರು ಜಿಲ್ಲೆಯ ಪಾವಗಡ, ಬೆಂಗಳೂರಿನ ಆನೇಕಲ್‌ನಲ್ಲಿ 7 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದ್ದಾರೆ.