ಬೆಂಗಳೂರು: 2021ರ ಜನವರಿಯಲ್ಲಿ ಶಿವಮೊಗ್ಗದ ಹೊರವಲಯ ಹುಣಸೋಡುವಿನಲ್ಲಿ ನಡೆದಿದ್ದ ಸ್ಫೋಟದಲ್ಲಿ (Shivamogga quarry explosion case) ಸಾವನ್ನಪ್ಪಿದವರಿಗೆ ಪರಿಹಾರ ನೀಡಲಾಗಿದೆ. ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಅಕ್ರಮ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಾಗೂ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ವಕೀಲ ವಿಜಯ್ ಕುಮಾರ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರ್ಕಾರ ಕೈಗೊಂಡ ಕ್ರಮ
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸ್ಫೋಟದಲ್ಲಿ ಮೃತಪಟ್ಟ 5 ಮಂದಿ ಕುಟುಂಬಕ್ಕೂ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿತರಾದ ಸುಧಾಕರ್, ನರಸಿಂಹ ಮತ್ತು ಅವಿನಾಶ್ ವಿರುದ್ಧ ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ. ಶಿವಮೊಗ್ಗ ಮತ್ತು ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಕ್ವಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿವರಿಸಿದರು.