ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಗೆ ಪಿತೂರಿ ನಡೆಸಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಗಳೂರು ಘಟಕದ ಅಧ್ಯಕ್ಷ ಮೊಹಮ್ಮದ್ ಷರೀಫ್‌ಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಮೊಹಮ್ಮದ್ ಷರೀಫ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ.
ಪ್ರಕರಣದ ವಿವರ: ಫೇಸ್‌ಬುಕ್‌ನಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಾಸಕ ಅಖಂಡ ಶ್ರಿನಿವಾಸ್ ಅಳಿಯ ಪಿ. ನವೀನ್ನನ್ನು ಬಂಧಿಸುವಂತೆ ಒತ್ತಾಯಿಸಿ 2020ರ ಆಗಸ್ಟ್ 11ರ ರಾತ್ರಿ ಕೆಲ ದುಷ್ಕರ್ಮಿಗಳು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ, ಹಿಂಸಾಚಾರ ಸೃಷ್ಟಿಸಿದ್ದರು. ಈ ಪ್ರಕರಣದಲ್ಲಿ ಗಲಭೆಗೆ ಪಿತೂರಿ ನಡೆಸಿದ ಆರೋಪದಡಿ ಮೊಹಮ್ಮದ್ ಷರೀಫ್‌ನನ್ನು 25ನೇ ಆರೋಪಿಯಾಗಿ ಎನ್‌ಐಎ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಆರೋಪಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದ.