ಬೆಂಗಳೂರು: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕೈಗೊಂಡಿರುವ ಸಮೀಕ್ಷೆ ಕಾರ್ಯ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿರುವ ಹೈಕೋರ್ಟ್ ಈ ಕುರಿತ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಓದಿ: ಸ್ಪುಟ್ನಿಕ್ ತಯಾರಕರು ಲಸಿಕೆ ದೆಹಲಿಗೆ ಪೂರೈಸಲು ಒಪ್ಪಿದ್ದಾರೆ: ಸಿಎಂ ಕೇಜ್ರಿವಾಲ್
ಕಡ್ಡಾಯ ಶಿಕ್ಷಣ ಕಾಯ್ದೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಹೈಕೋರ್ಟ್ 2013ರಲ್ಲಿ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಲವು ದೊಡ್ಡ ನಗರಗಳಲ್ಲಿ ಸಮೀಕ್ಷೆ ನಡೆದಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಪ್ರಗತಿಯಾಗಿಲ್ಲ. ಇದೇ ಏಪ್ರಿಲ್ 16 ರಂದು ಸಭೆ ನಡೆಸಿ ಈವರೆಗಿನ ಪ್ರಗತಿ ಬಗ್ಗೆ ಚರ್ಚಿಸಲಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ಗೆ ನೆರವು ನೀಡಲು ನೇಮಕಗೊಂಡಿರುವ ಹಿರಿಯ ನ್ಯಾಯವಾದಿ ಕೆ.ಎನ್ ಫಣೀಂದ್ರ ಮಾಹಿತಿ ನೀಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಬಗ್ಗೆ ಸರ್ಕಾರ 2020ರ ಡಿಸೆಂಬರ್ 4 ಮತ್ತು 12 ರಂದು ಸುತ್ತೋಲೆ ಹೊರಡಿಸಿತ್ತು. ನಿಗದಿಯಂತೆ 2021ರ ಫೆಬ್ರವರಿಯಲ್ಲಿ ಸಮೀಕ್ಷೆ ಮುಗಿಯಬೇಕಿತ್ತು ಎಂದರು.
ಹೇಳಿಕೆಗಳನ್ನು ದಾಖಲಿಸಿಕೊಂಡ ಪೀಠ, ಸಮೀಕ್ಷೆ ಯಾವ ಹಂತದಲ್ಲಿದೆ, ಏನೆಲ್ಲ ಪ್ರಗತಿ ಆಗಿದೆ ಎಂಬ ಕುರಿತು ಜೂನ್ 21ರೊಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿತು. 2019ರಲ್ಲಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದ ಶಿಕ್ಷಣ ಇಲಾಖೆ ರಾಜ್ಯದಲ್ಲಿ 70 ಸಾವಿರಕ್ಕೂ ಅಧಿಕ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದಿತ್ತು.