ಬೆಂಗಳೂರು :ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ್ದಕ್ಕೆ ದೇಶದ್ರೋಹ ಆರೋಪದಡಿ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳನ್ನು ಶಸ್ತ್ರಾಸ್ತ್ರ ಸಹಿತವಾಗಿ ಸಮವಸ್ತ್ರದಲ್ಲಿ ತೆರಳಿ ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಪೊಲೀಸರು ಶಾಲಾ ಮಕ್ಕಳನ್ನು ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ರೆಮ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಮಕ್ಕಳ ವಿಚಾರಣೆ ಸಂದರ್ಭದಲ್ಲಿ ಬಾಲ ನ್ಯಾಯ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.
ಇದರ ಜೊತೆಗೆ ಈ ಕುರಿತು ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಮಾಣಪತ್ರ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಕಾಲುವೆ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಆರೋಪ: ಸಚಿವ ಆನಂದ ಸಿಂಗ್ ವಿರುದ್ಧ ದೂರು