ಬೆಂಗಳೂರು :ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪದಡಿ ಕುಣಿಗಲ್ ಶಾಸಕ ಡಾ. ಹೆಚ್ ಡಿ ರಂಗನಾಥ್ ವಿರುದ್ಧದ ಜೆಎಂಎಫ್‌ಸಿ ನ್ಯಾಯಾಲಯದ ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಕುರಿತಂತೆ ತಮ್ಮ ವಿರುದ್ಧದ ಕುಣಿಗಲ್ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಶಾಸಕ ರಂಗನಾರ್ಥ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಕುಣಿಗಲ್ ಪೊಲೀಸ್ ಠಾಣಾಧಿಕಾರಿ ಮತ್ತು ದೂರುದಾರ ಪಿ.ಹೆಚ್ ಗೋವಿಂದರಾಜು ಅವರಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಪ್ರಕರಣ : 2021ರ ಜೂನ್ 18ರಂದು ರಮೇಶ್ ಎಂಬುವರು ಕುಣಿಗಲ್ ಸಮೀಪದ ಹುಲಿದುರ್ಗ ಬೈಪಾಸ್ ರಸ್ತೆಯಲ್ಲಿ ಅಪಘಾತಕ್ಕೆ ಗುರಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಮೃತರ ಶವಪರೀಕ್ಷೆ ನಡೆಸಲು ಮತ್ತು ತಕ್ಷಣಕ್ಕೆ ಕೈಗೊಳ್ಳಬೇಕಾದ ಯಾವುದೇ ಕ್ರಮಕೈಗೊಳ್ಳದ ಕುಣಿಗಲ್ ಠಾಣಾಧಿಕಾರಿಯ ನಡೆ ವಿರೋಧಿಸಿ ಜೂನ್ 19ರಂದು ಮೃತ ಕುಟುಂಬಸ್ಥರು, ಸಂಬಂಧಿಕರು ಮತ್ತು ಹಿತೈಷಿಗಳು ಪೊಲೀಸ್ ಠಾಣೆ ಮಂದೆ ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ಶಾಸಕ ರಂಗನಾಥ್ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಗೋವಿಂದರಾಜು ಎಂಬುವರು ದೂರು ನೀಡಿದ್ದರು. ಅದನ್ನು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಹಿನ್ನೆಲೆ ಪ್ರಕರಣವನ್ನು ರದ್ದು ಕೋರಿ ಶಾಸಕ ರಂಗನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ - 2 ಸಿನಿಮಾ ಬಿಡುಗಡೆಗೆ ತಡೆ ಕೋರಿದ್ದ ಅರ್ಜಿ ವಜಾ