ಬೆಂಗಳೂರು: ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವಂತೆ ಈ ಹಿಂದೆ ನ್ಯಾಯಾಲಯ ನೀಡಿರುವ ಆದೇಶ ಪಾಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ತಾಕೀತು ಮಾಡಿದ್ದು, ಅದನ್ನು ಪಾಲಿಸಲು ಕೊನೆಯದಾಗಿ ಒಂದು ತಿಂಗಳ ಕಾಲಾವಕಾಶ ನೀಡಿದೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡ್ಗಳಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ವಕೀಲ ಅಶ್ವತ್ಥ್ ನಾರಾಯಣ ಚೌಧರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ, ಜುಲೈ 16ರಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮತ್ತು ಹಿಂಬರಹದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 12, 14, 39 ಮತ್ತು 71ರಲ್ಲಿ ರಸ್ತೆಗಳ ಅಭಿವೃದ್ಧಿಗೆ 36.80 ಕೋಟಿ ರೂಪಾಯಿ ಒದಗಿಸಿರುವ ಕುರಿತು ಮಾಹಿತಿ ನೀಡಿದ್ದಾರೆ. ಆದರೆ, ದಾಖಲೆಗಳನ್ನು ಸಲ್ಲಿಸಿಲ್ಲ. ಬಿಬಿಎಂಪಿ ಪರ ವಕೀಲರು 2021ರ ಜನವರಿ ಬಳಿಕ ಯಾವುದೇ ಹಣ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಒಂದು ತಿಂಗಳೊಳಗೆ ಹಣ ಬಿಡುಗಡೆ ಮಾಡುವಂತೆ ನ್ಯಾಯಾಲಯ ಜೂನ್ 24ರಂದು ಹೊರಡಿಸಿರುವ ಆದೇಶ ಕೂಡ ಸರ್ಕಾರ ಪಾಲಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿತು.