ಕರ್ನಾಟಕ

karnataka

ರಸ್ತೆ ಗುಂಡಿ ಮುಚ್ಚುವಲ್ಲಿ ಲೋಪ: ಸರಿಪಡಿಸಿಕೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

By

Published : May 29, 2021, 8:37 AM IST

ಬೆಂಗಳೂರು ನಗರದ ರಸ್ತೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Bangalore
ರಸ್ತೆ ಗುಂಡಿ ಮುಚ್ಚುವಲ್ಲಿ ಲೋಪ: ಸರಿಪಡಿಸಿಕೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ವೇಳೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.

ನಗರದ ರಸ್ತೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಬಿಬಿಎಂಪಿ ಪರ ವಕೀಲ ಕೆ.ಎನ್.ಪುಟ್ಟೇಗೌಡ ಮಾಹಿತಿ ನೀಡಿ, ಪಾಲಿಕೆಯ ಬಹುತೇಕ ಅಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್ ಕರ್ತವ್ಯದಲ್ಲಿದ್ದಾರೆ. ಹೀಗಾಗಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಶಿಫಾರಸುಗಳನ್ನು ಅಳವಡಿಸಿಕೊಂಡಿರುವ ಮಾಹಿತಿ ಲಭ್ಯವಾಗುತ್ತಿಲ್ಲ. ಈ ಬಗ್ಗೆ ತಿಳಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದರು.

ಅರ್ಜಿದಾರರ ಪರ ವಕೀಲೆ ಅನುರಾಧ ವಾದಿಸಿ, ರಸ್ತೆ ಗುಂಡಿಗಳ ಸಂಬಂಧ ವಸ್ತುಸ್ಥಿತಿ ಪರಿಶೀಲಿಸಿ ಕಾನೂನು ಸೇವಾ ಪ್ರಾಧಿಕಾರ ನೀಡಿದ ವರದಿಗೆ ಪಾಲಿಕೆ ಉತ್ತರ ನೀಡಬೇಕಿತ್ತು. ಆದರೆ, ಈವರೆಗೆ ನೀಡಿಲ್ಲ. ಇನ್ನು ಮುಂದಾದರೂ ಸಮಿತಿ ಪಟ್ಟಿ ಮಾಡಿರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಪಾಲಿಕೆಗೆ ನಿರ್ದೇಶನ ನೀಡಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕಾನೂನು ಸೇವಾ ಪ್ರಾಧಿಕಾರ ಕಾಮಗಾರಿಗಳಲ್ಲಿ ಆಗುತ್ತಿರುವ ಲೋಪಗಳನ್ನು ಪಟ್ಟಿ ಮಾಡಿ, ಅವುಗಳನ್ನು ಸರಿಪಡಿಸಿಕೊಳ್ಳಲು ಕೆಲವು ಶಿಫಾರಸುಗಳನ್ನು ಮಾಡಿದೆ. ಅವುಗಳನ್ನು ಪಾಲಿಸಿ ಎಂದು ಸೂಚಿಸಿತು. ಪಾಲಿಕೆ ಪರ ವಕೀಲರು ಭರವಸೆ ನೀಡಿ, ಮುಂದಿನ ದಿನಗಳಲ್ಲಿ ಪ್ರಾಧಿಕಾರದ ಶಿಫಾರಸುಗಳನ್ನು ಅಳವಡಿಸಿಕೊಳ್ಳಲಾಗುವುದು. ಉತ್ತಮ ರಸ್ತೆಗಳನ್ನು ಒದಗಿಸುವುದು ಪಾಲಿಕೆಯ ಕರ್ತವ್ಯವಾಗಿದೆ. ಅದನ್ನು ನಿಭಾಯಿಸಲು ಶ್ರಮಿಸಲಾಗುವುದು ಎಂದರು.

ಓದಿ:ಮೌಢ್ಯದಿಂದ ಕೊರೊನಾ ವಿರುದ್ಧ ಗೆಲುವು ಅಸಾಧ್ಯ, ಇದರಿಂದಲೇ ಸೋಂಕು ಹೆಚ್ಚಾಗುತ್ತೆ: ಬೆಳಗಾವಿ ಎಸ್​ಪಿ

ABOUT THE AUTHOR

...view details