ಬೆಂಗಳೂರು: ಆಕ್ಷೇಪಾರ್ಹ ವ್ಯಕ್ತಿಗತ ಟ್ವಿಟರ್ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ಬಂಧಕ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಪ್ರತಿವಾದಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿ, ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿತು.
ಕೇಂದ್ರದ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಕೇಂದ್ರದ ನಿರ್ಬಂಧ ಆದೇಶದಿಂದ ಆಗುವ ತೊಂದರೆಗಳ ಬಗ್ಗೆ ಸುದೀರ್ಘ ವಿವರಣೆ ನೀಡಿದರು. ನಂತರ ಟ್ವಿಟರ್ ಪರ ವಾದ ಮಂಡಿಸಿದ ಸುಪ್ರೀಂ ಕೋರ್ಟ್‌ನ ಪ್ರಸಿದ್ಧ ಹಿರಿಯ ವಕೀಲ ಮುಕುಲ್ ರೋಹಟ್ಗಿ, ಟ್ವಿಟರ್‌ನಲ್ಲಿ ವ್ಯಕ್ತಿಗತವಾಗಿ ಹೊಂದಿರುವ ಸಾವಿರಾರು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಕಾನೂನಿನ ಪ್ರಕಾರ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ. ನಿರ್ಬಂಧಕ ಆದೇಶವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ ಎಂದು ತಿಳಿಸಿದರು.
ಈ ನಿರ್ಬಂಧ ಆದೇಶ ಮತ್ತು ಜಾರಿಯು ಗೌಪ್ಯವಾಗಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿದ್ದು ಟ್ವಿಟರ್ ಅದನ್ನು ಬಹಿರಂಗಪಡಿಸಿಲ್ಲ. ಈ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದ ಗಮನಕ್ಕೆ ಮಾತ್ರ ತರಲಾಗುತ್ತಿದೆ. ಒಂದು ಸಾವಿರಕ್ಕೂ ಹೆಚ್ಚಿನ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಸರ್ಕಾರ ಆದೇಶಿಸಿದ್ದು ಯಾವುದೇ ಸಕಾರಣ ನೀಡಿಲ್ಲ ಎಂದು ರೋಹಟಗಿ ನ್ಯಾಯಾಲಯದ ಗಮನಕ್ಕೆ ತಂದರು.