ಬೆಂಗಳೂರು:ತುಮಕೂರು ನಗರದ ರಸ್ತೆಗಳಲ್ಲಿನ ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ಹಾಗೂ ದುರಸ್ತಿ ಮಾಡಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ತುಮಕೂರು ನಗರಸಭೆಗೆ, ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ತುಮಕೂರು ನಗರದ ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ಕೆಲವು ಕಡೆಯಂತೂ ರಸ್ತೆ ಗುಂಡಿಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು, ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿವೆ. ಆದ್ದರಿಂದ ರಸ್ತೆ ಗುಂಡಿಗಳನ್ನು ತರ್ತಾಗಿ ಮುಚ್ಚಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಬೇಕು ಎಂದು ಕೋರಿದರು.
ಇದನ್ನೂ ಓದಿ: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಜ್ರ ಬಸ್ ಪ್ರಯಾಣ ದರದಲ್ಲಿ ಭಾರಿ ಇಳಿಕೆ
ವಾದ ಪರಿಗಣಿಸಿದ ಪೀಠ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ನಗರಸಭೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, 2 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.