ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಆರೋಪದಡಿ ಬೆಳಗಾವಿಯ ರಾಯಬಾಗ್ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಹಾಗೂ ಇತರೆ ನಾಲ್ವರು ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆನಂದ್ ಸಿದ್ರಾಮ್ ಅಕ್ಕಿಮರಡಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಪೊಲೀಸರು ದಾಖಲಿಸಿದ್ದ ಎಫ್‍ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸಿಆರ್ ಪಿಸಿ ಸೆಕ್ಷನ್ 155 ಪ್ರಕಾರ ಅಸಂಜ್ಞೆಯ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಳ್ಳಬೇಕು. ಆದರೆ, ಈ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಂಡಿಲ್ಲ. ಸಂಬಂಧಪಟ್ಟ ಚುನಾವಣಾಧಿಕಾರಿ ಖಾಸಗಿ ದೂರು ದಾಖಲಿಸುವ ಬದಲು ನೇರವಾಗಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯದ ಪ್ರಕರಣಗಳನ್ನು ರದ್ದುಪಡಿಸಬಹುದು ಎಂದು ಹೈಕೋರ್ಟ್ ಈ ಹಿಂದೆ ಆದೇಶಿಸಿದೆ ಎಂದಿದ್ದರು. ವಾದ ಪರಿಗಣಿಸಿರುವ ಪೀಠ, ಪ್ರಕರಣ ರದ್ದುಪಡಿಸಿದೆ.