ಬೆಂಗಳೂರು : ಕೇರಳದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ನಡುವೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸುವ ಬದಲು ಕೋವಿಡ್ ಪರೀಕ್ಷೆ ನಡೆಸಿ ಸಂಚಾರಕ್ಕೆ ಅವಕಾಶ ನೀಡುವುದು ಸೂಕ್ತ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗಡಿ ಸಂಚಾರ ನಿರ್ಬಂಧಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಕಾಸರಗೋಡಿನ ವಕೀಲ ಬಿ. ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಯಾವುದೇ ರಸ್ತೆ ಮುಚ್ಚಲು ಅಥವಾ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲು ಕೇಂದ್ರ ಆದೇಶ ಮಾಡಿಲ್ಲ. ಆದರೆ, ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತಗಳು ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
ಇದನ್ನೂ ಓದಿ:ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಹೇಳಿಕೆ ಪರಿಗಣಿಸಿದ ಪೀಠ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಂತರ್ ರಾಜ್ಯ ಸಂಚಾರ ನಿರ್ಬಂಧಿಸುವಂತಿಲ್ಲ. ಅದನ್ನು ರಾಜ್ಯ ಸರ್ಕಾರ ಪಾಲಿಸಬೇಕು. ಗಡಿಗಳನ್ನು ಮುಚ್ಚುವ ಬದಲು, ಚೆಕ್‌ಪೋಸ್ಟ್ ಬಳಿ ಹೊರ ರಾಜ್ಯಗಳಿಂದ ಬಂದವರ ಆರ್‌ಟಿಪಿಸಿಆರ್ ವರದಿ ಪರೀಕ್ಷಿಸುವ ವ್ಯವಸ್ಥೆ ಮಾಡಬೇಕು. ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಇದ್ದರೆ ರಾಜ್ಯದೊಳಗೆ ಸಂಚರಿಸಲು ಅನುಮತಿ ನೀಡಬಹುದು ಎಂದು ಸರ್ಕಾರಕ್ಕೆ ಸಲಹೆ ನೀಡಿತು.
ಕೋವಿಡ್ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿ ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದರಿಂದ ಕಾಲೇಜು-ಶಾಲೆ, ವೈದ್ಯಕೀಯ ಸೇವೆಗಳು ಮತ್ತು ವಾಣಿಜ್ಯ ಉದ್ದೇಶಗಳಿಗೆ ನಿತ್ಯ ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ, ಪುತ್ತೂರು, ಮಂಗಳೂರು ಮತ್ತು ಕೊಡಗು ಮತ್ತಿತರ ಪ್ರದೇಶಗಳಲ್ಲಿ ಸಂಚಾರ ಮಾಡುವ ಕೇರಳ-ಕರ್ನಾಟಕ ಗಡಿಭಾಗದ 80 ಸಾವಿರಕ್ಕೂ ಅಧಿಕ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.