ಬೆಂಗಳೂರು:ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಅನುಮತಿ ನೀಡಿರುವ ರಾಜ್ಯ ವನ್ಯಜೀವಿ ಮಂಡಳಿ ನಿರ್ಣಯ ಆಧರಿಸಿ ಯಾವುದೇ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಅರಣ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಅರ್ಜಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ಬಳಿಕ 2020ರ ಮಾರ್ಚ್ 20ರಂದು ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡಿರುವ ನಿರ್ಣಯ ಆಧರಿಸಿ ರೈಲು ಮಾರ್ಗ ನಿರ್ಮಾಣ ಯೋಜನೆಯ ಯಾವುದೇ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನ ಜುಲೈ 14ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ...
ಹುಬ್ಬಳ್ಳಿ-ಅಂಕೋಲಾ ನಡುವೆ 164 ಕಿಲೋ ಮೀಟರ್ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಅದಕ್ಕಾಗಿ 595 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ 2 ಲಕ್ಷಕ್ಕೂ ಅಧಿಕ ಮರಗಳನ್ನು ಕತ್ತರಿಸಬೇಕಾಗಿತ್ತು. ಅನುಮತಿ ಕೋರಿ ರಾಜ್ಯ ವನ್ಯಜೀವಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರಂಭದಲ್ಲಿ ತಿರಸ್ಕರಿಸಿದ್ದ ಮಂಡಳಿ ಅಂತಿಮವಾಗಿ ಅನುಮತಿಸಿದೆ. ಈ ನಿರ್ಣಯಗಳು ಅನುಮಾನಸ್ಪದವಾಗಿದ್ದು, ಅರಣ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಅರ್ಜಿದಾರರು ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ.