ಬೆಂಗಳೂರು: ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಇದ್ದಿದ್ದರೆ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು, ಕಾರ್ಮಿಕರು ಹಾಗೂ ಸಾಮಾನ್ಯ ಪ್ರಯಾಣಿಕರನ್ನು ಕರೆದೊಯ್ಯುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೈಕೋರ್ಟ್ ಸರ್ಕಾರಿ ಸಾರಿಗೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ ಕಾರ್ಮಿಕರು ಹಾಗೂ ಸಾಮಾನ್ಯ ಪ್ರಯಾಣಿಕರನ್ನು ಕರೆದೊಯ್ಯುವುದನ್ನು ತಡೆಗಟ್ಟಲು ಸಾರಿಗೆ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಬಿಎಂಟಿಸಿ ಪರ ವಕೀಲರು ವಾದಿಸಿ, ನಗರದ ಬಹುತೇಕ ಕಡೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಾಗಿದ್ದೂ ವಿವಿಧ ಕಾರಣಗಳಿಂದಾಗಿ ಶಾಲಾ ಮಕ್ಕಳು ಹಾಗೂ ಕಾರ್ಮಿಕರು ಸರಕು ವಾಹನಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಎಲ್ಲಿ ಬಸ್ ವ್ಯವಸ್ಥೆ ಇಲ್ಲವೋ ಆ ಕುರಿತು ನಮಗೆ ತಿಳಿಸಿದರೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಈ ಕುರಿತು ಅರ್ಜಿದಾರರ ಬಳಿ ಮಾಹಿತಿ ಅಥವಾ ಸಲಹೆಗಳಿದ್ದರೆ ಅದನ್ನು ನಮಗೆ ನೀಡಲಿ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೀಠ, ಎಲ್ಲಾ ಕಡೆ ಸಾರಿಗೆ ವ್ಯವಸ್ಥೆ ಇದೆ ಎಂದು ನಿಮಗೆ ನೀವೇ ಸರ್ಟಿಫಿಕೇಟ್ ಕೊಟ್ಟುಕೊಂಡರೆ ಹೇಗೆ? ನಗರದಲ್ಲಿ ಸಾರ್ವಜನಿಕ ಸಾರಿಗೆಯ ಸ್ಥಿತಿಗತಿ ಹೇಗಿದೆ, ಬೇಡಿಕೆ ಎಷ್ಟಿದೆ, ಎಲ್ಲೆಲ್ಲಿ ಸಮಸ್ಯೆ ಇದೆ ನಿಖರವಾಗಿ ತಿಳಿದುಕೊಂಡಿದ್ದೀರಾ?. ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳು, ಕಾರ್ಮಿಕರು ಸರಕು ವಾಹನಗಳಲ್ಲಿ ಪ್ರಯಾಣಿಸಲು ಕಾರಣಗಳೇನು ಎಂಬ ಬಗ್ಗೆ ಅಧ್ಯಯನ ನಡೆಸಿದ್ದೀರಾ? ಎಂದು ಬಿಎಂಟಿಸಿ ಪರ ವಕೀಲರನ್ನು ಕಟುವಾಗಿ ಪ್ರಶ್ನಿಸಿತು.
ಕಾರ್ಮಿಕರು ಸರಕು ವಾಹನಗಳಲ್ಲಿ ಪ್ರಯಾಣ ಮಾಡುತ್ತಿರುವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬುದಕ್ಕೆ ನಿದರ್ಶನ. ನಿಮ್ಮ ವ್ಯವಸ್ಥೆ ಸರಿ ಇದ್ದಿದ್ದರೆ ಜನರೇಕೆ ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು. ನಂತರ, ಅರ್ಜಿ ಕುರಿತು ಮೂರು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕಾರ್ಮಿಕ ಇಲಾಖೆ, ಕೆಎಸ್‌ಆರ್‌ಟಿಸಿ, ಎನ್‌ಇಕೆಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ ಮತ್ತು ಬಿಎಂಟಿಸಿಗೆ ಸೂಚಿಸಿ ವಿಚಾರಣೆ ಮುಂದೂಡಿತು.