ಬೆಂಗಳೂರು:ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೀಠ ರಚನೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿದೆ.
ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರಮ ಪ್ರಶ್ನಿಸಿ ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಹಲವು ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನಿನ್ನೆ ಹಾಗೂ ಮೊನ್ನೆ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು.
ನಿನ್ನೆ ನಡೆದ ವಿಚಾರಣೆ ವೇಳೆ ಪ್ರಕರಣದಲ್ಲಿ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆರೋಪವಿದೆ. ಅಲ್ಲದೇ, ಹಿಜಾಬ್ ಧರಿಸುವುದು ಮೂಲಭೂತ ಹಕ್ಕಾಗಿದೆಯೇ ಮತ್ತು ಹಿಜಾಬ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆಯೇ ಎಂಬುದೂ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾಗಿದೆ. ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು.