ಬೆಂಗಳೂರು:ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಇಂದು ಸಂಜೆ ಮೈಸೂರಿಗೆ ತೆರಳುತ್ತಿದ್ದೇನೆ. ನಾಳೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿ ಅವರನ್ನು ಮೈಸೂರಿಗೆ ಕಳುಹಿಸಲಾಗಿದೆ. ತನಿಖೆಗೆ ಬೇರೆ-ಬೇರೆ ತಂಡಗಳನ್ನು ರಚಿಸಲಾಗಿದೆ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮೈಸೂರು ಪ್ರಮುಖವಾದ ಪ್ರವಾಸಿ ತಾಣ. ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ. ಈ ಘಟನೆ ದುರದೃಷ್ಟಕರ, ತಲೆತಗ್ಗಿಸುವಂತಹದ್ದು. ನಾಳೆ ಇಡೀ ದಿನ ಮೈಸೂರಿನಲ್ಲೇ ಇರುತ್ತೇನೆ, ಪೊಲೀಸ್ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸುತ್ತೇನೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.
ಪೊಲೀಸರು ತಕ್ಷಣವೇ ಕಾರ್ಯೋನ್ಮುಖರಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದ ಹಿಡಿದು ಎಲ್ಲವನ್ನೂ ನಿಭಾಯಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟ್ರದವರು ಎಂಬ ಮಾಹಿತಿಯಿದೆ. ಅವರ ತಂದೆ, ತಾಯಿ ಸಹ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದರು.