ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸಜ್ಜುಗೊಳಿಸಲಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕೋವಿಡ್ ಸೋಂಕಿತರಿಗೆ ಯಾವುದೇ ಲೋಪವಾಗದಂತೆ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯ ಕೋವಿಡ್-19 ಮೇಲ್ವಿಚಾರಣೆ ಉಸ್ತುವಾರಿ ಸಚಿವರಾದ ವಸತಿ ಸಚಿವ ವಿ.ಸೋಮಣ್ಣ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಂಡೋಕ್ರೈನಾಲಜಿ ಕೇಂದ್ರದಲ್ಲಿ ಮಹಾನಗರ ಪಾಲಿಕೆ ಸಜ್ಜುಗೊಳಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಶೌಚಗೃಹ, ಫ್ಯಾನ್ಗಳ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ಸೂಚಿಸಿದರು. ಸಿಬ್ಬಂದಿ ಕೊರತೆ ಇದ್ದರೆ ತಕ್ಷಣವೇ ನೇಮಿಸಿಕೊಳ್ಳಲು ಆದೇಶ ನೀಡಿದ ಸಚಿವರು, ಸಂಕಷ್ಟದಲ್ಲಿರುವ ಕೋವಿಡ್ ರೋಗಿಗಳಿಗೆ ಮಾನಸಿಕವಾಗಿ ಸ್ಥೈರ್ಯ ತುಂಬುವ ಕೆಲಸವನ್ನು ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.