ಬೆಂಗಳೂರು: ರಾಮನಗರ ಜಿಲ್ಲೆಯ ಮಂಚನಬೆಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿಪ್ಪಗೊಂಡನಹಳ್ಳಿ ಜಲಾಶಯದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಕುರಿತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ. ಸತೀಶ್ ಚಂದ್ರ ಶರ್ಮ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಎರಡು ಜಲಾಯಶಗಳ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕೈಗೊಂಡಿರುವ ಕ್ರಮಗಳ ವರದಿಯನ್ನು ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು.
ವರದಿ ಪರಿಶೀಲಿಸಿದ ಪೀಠ, ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿರುವುದರಿಂದ ಹೆಚ್ಚಿನ ನಿರ್ದೇಶನಗಳನ್ನು ನೀಡುವ ಅಗತ್ಯವಿಲ್ಲ. ಆದರೆ, ಭವಿಷ್ಯದಲ್ಲಿ ಜಲಾಶಯಗಳ ಸುತ್ತ ಮತ್ತೆ ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಗಣಿಗಾರಿಕೆ ನಡೆಸದಂತೆ ಸರ್ಕಾರ ಖಾತರಿಪಡಿಸಬೇಕು ಎಂದು ನಿರ್ದೇಶಿಸಿತು. ಅಲ್ಲದೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪ್ರತಿ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಬೇಕು. ಒಂದೊಮ್ಮೆ ಅಕ್ರಮ ಗಣಿಗಾರಿಕೆ ಬೆಳಕಿಗೆ ಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ರಾಮನಗರ ಗಡಿಭಾಗದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯಗಳು ಕಲುಷಿತಗೊಂಡಿವೆ. ಕುಡಿಯುವ ನೀರಿನ ಮೂಲಗಳಾಗಿದ್ದ ಜಲಾಶಯಗಳು ಮಲಿನಗೊಂಡಿವೆ. ಅಕ್ರಮ ಕಲ್ಲು ಗಣಿಗಾರಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫರಾಗಿದ್ದಾರೆ. ಹೀಗಾಗಿ, ಅಕ್ರಮ ಕಲ್ಲುಗಣಿಗಾರಿಕೆ ತಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು.