ಬೆಂಗಳೂರು: ಒಂದೆಡೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ. ಇನ್ನೊಂದೆಡೆ ಉಪ ಚುನಾವಣೆ ಹತ್ತಿರವಾಗುತ್ತಿರುವ ವೇಳೆಯಲ್ಲೇ ಯಡಿಯೂರಪ್ಪನವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಪ್ರತಿಪಕ್ಷಗಳಿಗೆ ಆಹಾರವಾಗಿದೆ.
ಬಿಎಸ್ವೈ ಅವರ ಆಡಿಯೋ ಸೋರಿಕೆಯನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್, ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿವೆ.
ಅನರ್ಹ ಶಾಸಕರ ಕುರಿತು ಮಾತನಾಡಿರುವ ಯಡಿಯೂರಪ್ಪನವರ ಆಡಿಯೋವನ್ನು ಸೋಮವಾರ ಸುಪ್ರೀಂಕೋರ್ಟ್ಗೆ ಸಾಕ್ಷಿಯಾಗಿ ನೀಡಲಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹೇಳಿಕೆ ನೀಡಿರುವುದು ಬಿಎಸ್ವೈಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಮುಂದಿನ ವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಸುಪ್ರೀಂಕೋರ್ಟ್ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮನವಿ ಮಾಡಲು ತೀರ್ಮಾನಿಸಿವೆ.
ನೆರೆಯಿಂದಾಗಿ ಹಲವು ಜಿಲ್ಲೆಗಳ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದು ನೂರು ದಿನ ಪೂರೈಸಿರುವ ಬಿಜೆಪಿ ಸರ್ಕಾರಕ್ಕೆ ದೊಡ್ಡ ಪೆಟ್ಟು ನೀಡಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿ ಸರ್ಕಾರಕ್ಕೆ ಪರೋಕ್ಷವಾಗಿ ಮಾತಿನ ಏಟು ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಪರಿಹಾರ ಕಾರ್ಯ ಜಾಹೀರಾತಿನಲ್ಲಿ ಕಾಣುತ್ತಿದೆಯೇ ಹೊರತು ವಾಸ್ತವವಾಗಿ ಸಮಾಧಾನ ತಂದಿಲ್ಲ. ಜನರ ಬದುಕು ಸಂಕಷ್ಟದಲ್ಲಿದೆ. ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯ ತುರ್ತಾಗಿ ನಡೆಯಬೇಕಿದೆ ಎಂದಿದ್ದಾರೆ.