ಬೆಂಗಳೂರು :ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದೆ. ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯುತ್ತಿದೆ. ಶಾಸ್ತ್ರೋಕ್ತವಾಗಿ ಮೆರವಣಿಗೆ ಮೂಲಕ ಪುಣ್ಯಜಲವನ್ನು ಸಂಗ್ರಹ ಮಾಡುವ ಕಾರ್ಯಕ್ರಮವನ್ನು ಜೆಡಿಎಸ್ ಹಮ್ಮಿಕೊಂಡಿದೆ.
ಈ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಅವರು, ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ಕಾವೇರಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಲ್ಲದೆ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲೆಯ ಹೇಮಾವತಿಯಲ್ಲಿ, ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ತದ ಉತ್ತರ ಪಿನಾಕಿನಿ ನದಿಯಲ್ಲಿ ಜಲ ಸಂಗ್ರಹ ಮಾಡಿದ್ದಾರೆ.
ಅನಿತಾ ಕುಮಾರಸ್ವಾಮಿ, ಶಾಸಕ ಎ.ಮಂಜುನಾಥ್ ಹಾಗೂ ಹಲವು ಮುಖಂಡರು ಮೇಕೆದಾಟುನಲ್ಲಿ ಕಾವೇರಿ ನದಿ ನೀರು ಸಂಗ್ರಹ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಹೀಗೆ ಹಲವು ನಾಯಕರು ಹಲವು ಕಡೆಗಳಲ್ಲಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಜ್ಯದ ಹದಿನೈದು ಕಡೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ.
ಹನುಮ ಜಯಂತಿಯ ದಿನವಾದ ಇಂದು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಈ ಕಾರ್ಯ ಆರಂಭ ಮಾಡಿದ್ದೇವೆ. ಮೇ 8ರವರೆಗೆ ನಡೆಯಲಿರುವ ಈ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಿ ಕೊಂಡು ಬೆಂಗಳೂರಿಗೆ ಬರಲಾಗುತ್ತದೆ. ಉಳಿದ ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಮುಖಂಡರು ಜಲಸಂಗ್ರಹ ಮಾಡಲಿದ್ದಾರೆ ಎಂದು ತಿಳಿಸಿದರು.
ನಾಳೆ ಸಿ ಎಂ ಇಬ್ರಾಹಿಂ ಪದಗ್ರಹಣ : ನಾಳೆ ಸಿ ಎಂ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್ ಕೆ ಕುಮಾರಸ್ವಾಮಿ ಅವರು ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.