ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಬೆಳಗ್ಗೆ 10ಗಂಟೆಗೆ ಸಭೆ ನಡೆಯಲಿದೆ.
ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ. ಶಾಸಕಾಂಗ ಸಭೆಗೆ ಹಾಜರಾಗುವಂತೆ ಪಕ್ಷದ ಸಚೇತಕ ವೆಂಕಟರಾವ್ ನಾಡಗೌಡ ಅವರು ಶಾಸಕರಿಗೆ ಪತ್ರ ಬರೆದಿದ್ದಾರೆ. ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ನೀಡಿ ಪ್ರಸ್ತಾಪಿಸಬೇಕು, ಇತ್ತೀಚಿನ ರಾಜಕೀಯ ವಿದ್ಯಮಾನಗಳು, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ.
ಕಳೆದ ಜಂಟಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ವಿಚಾರಗಳನ್ನು ಪ್ರಸ್ತಾಪಿಸಲು ಜೆಡಿಎಸ್ ಸಿದ್ಧವಿತ್ತು. ಆದರೆ, ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿದ್ದರಿಂದ ಸದನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲಿಲ್ಲ. ಅಲ್ಲದೇ ನಿಗದಿತ ಅವಧಿಗಿಂತ ಮೂರು ದಿನ ಮೊದಲೇ ಅಧಿವೇಶನ ಮೊಟಕುಗೊಂಡಿತ್ತು. ಹೀಗಾಗಿ ಯಾವುದೇ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಲು ಜೆಡಿಎಸ್‍ಗೆ ಅವಕಾಶ ಸಿಕ್ಕಿರಲಿಲ್ಲ.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ... ಹೀಗಿರುತ್ತೆ ಸಿಎಂ ಇಂದಿನ ದಿನಚರಿ
ಹಾಗಾಗಿ ಈ ಅಧಿವೇಶನದಲ್ಲಿ ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಮಹಾದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಪ್ರಮುಖವಾಗಿ ಜೆಡಿಎಸ್ ಪ್ರಸ್ತಾಪಿಸಲು ಉದ್ದೇಶಿಸಿದೆ. ರಾಜ್ಯದ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚೆ ಮಾಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.