ಬೆಂಗಳೂರು: ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಉಪ ಚುನಾವಣೆ ರದ್ದುಗೊಳಿಸಬೇಕೆಂದು ಭಾರತ ಚುನಾವಣಾ ಆಯೋಗಕ್ಕೆ ಜೆಡಿಎಸ್ ಆಗ್ರಹಿಸಿದೆ.
ಎರಡು ಕ್ಷೇತ್ರಗಳ ಚುನಾವಣೆ ತಡೆ ಹಿಡಿಯುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಪತ್ರ - ಚುನಾವಣಾ ಆಯೋಗಕ್ಕೆ ಜೆಡಿಎಸ್ ಪತ್ರ
ರಾಜ್ಯದ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ಆದರೆ ಎರಡು ಕ್ಷೇತ್ರಗಳಲ್ಲಿ ಚುನಾವಣೆ ರದ್ದುಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ಪತ್ರ ಬರೆದಿದೆ.
ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರು, ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಉಮೇದುದಾರರು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ.
ಹಿರೇಕೆರೂರು ಕ್ಷೇತ್ರದ ಅಭ್ಯರ್ಥಿ ಕಬ್ಬಿನ ಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಥಣಿ ಕ್ಷೇತ್ರದ ಅಭ್ಯರ್ಥಿ ಗುರಪ್ಪ ಎಸ್.ದಾಸ್ಯಾಳ್ ಅವರ ಮೇಲೆ ಬಿಜೆಪಿ ನಾಯಕರು ಒತ್ತಡ ಹೇರಿ ಆಮಿಷವೊಡ್ಡಿ ನಾಮಪತ್ರಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಮಾಡಲಾಗಿದೆ. ಹಾಗಾಗಿ ಈ ಎರಡೂ ಕ್ಷೇತ್ರಗಳ ಉಪಚುನಾವಣೆಯನ್ನು ರದ್ದು ಮಾಡಬೇಕೆಂದು ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.