ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ ಆಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.
ಕೊರೊನಾ ಪ್ರಕರಣ: ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ರು ವೈದ್ಯಕೀಯ ಶಿಕ್ಷಣ ಸಚಿವರು
ಕೊರೊನಾ ಸೋಂಕಿತರ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ. ಎಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆಯೋ ಅಲ್ಲಿ ಮಾತ್ರ ಪ್ರಕರಣಗಳು ಕಂಡುಬರುತ್ತಿವೆ. ಪ್ರೈಮರಿ, ಸೆಕೆಂಡರಿ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬರುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆಯೋ ಅಲ್ಲಿ ಮಾತ್ರ ಪ್ರಕರಣಗಳು ಕಂಡುಬರುತ್ತಿವೆ. ಪ್ರೈಮರಿ, ಸೆಕೆಂಡರಿ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬರುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಕೆಲವೊಂದು ಸಡಿಲಿಕೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಆಲೋಚನೆ ಮಾಡಲಾಗಿದೆ. ಯಾವ ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವ ಕುರಿತು ಆಯಾ ಇಲಾಖೆಯ ಮುಖ್ಯಸ್ಥರು ಮಾರ್ಗಸೂಚಿ ಹೊರಡಿಸಿದ್ದಾರೆ. ಆದರೂ ನೀವು ಕೆಲಸ ಮಾಡುವ ಜಾಗದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೂಕ್ತ ಎಂದರು.
ಇನ್ನು, ಕೋವಿಡ್-19 ನಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಸ್ಥಗಿತಗೊಂಡ ಕಾಮಗಾರಿಗಳನ್ನು ಚುರುಕುಗೊಳಿಸುವ ಕುರಿತು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ. ಕೊರೊನಾದಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗುವುದು. ಸಾಮಾಜಿಕ ಅಂತರ ಕಾಪಾಡಿಕೊಂಡು ಹೇಗೆ ಅಭಿವೃದ್ಧಿ ಕಾಮಗಾರಿ ಮಾಡಬೇಕು ಅನ್ನೋದರ ಬಗ್ಗೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ ಎಂದು ಸಚಿವರು ತಿಳಿಸಿದರು.