ಬೆಂಗಳೂರು :ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಆಯಾಮ ಕೊಟ್ಟು ಮತ್ತಷ್ಟು ಬಲಪಡಿಸುವಂತೆ ಸಿಎಂ ಬಿ ಎಸ್ ಯಡಿಯೂರಪ್ಪಗೆ ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, 1995ರಲ್ಲಿ ರಾಜ್ಯ ಸರ್ಕಾರದ ಆಡಳಿತ ಭಾಷಾ ನೀತಿಯ ಅನುಷ್ಠಾನಕ್ಕಾಗಿ ಮತ್ತು ಡಾ.ಸರೋಜಿನಿ ಮಹಿಷಿ ವರದಿಯ ಅಂಗೀಕೃತ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ಸಲಹೆ ನೀಡಲು ಹಾಗೂ ರಾಜ್ಯ ಸರ್ಕಾರದ ಆಡಳಿತದ ಎಲ್ಲಾ ಹಂತಗಳಲ್ಲಿ ಕನ್ನಡ ಬಳಸುವಂತೆ ನೋಡಿಕೊಳ್ಳುವ ಆಶಯವನ್ನು ಹೊತ್ತು ಶಾಸನಬದ್ಧ ಸಂಸ್ಥೆಯಾಗಿ ಎರಡು ಸದನದಲ್ಲಿ ಒಪ್ಪಿಗೆ ಪಡೆದು ಕಾಯ್ದೆಯಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಯಿತು ಎಂದು ವಿವರಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 25 ವರ್ಷಗಳಾಗಿದೆ. ಇತ್ತೀಚಿನ ದಿನಮಾನದಲ್ಲಿ ರಾಜ್ಯದ ಹಾಗೂ ಭಾಷೆಯ ವಿಚಾರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈಗಿನ ಪರಿಸ್ಥಿತಿ ಹಾಗೂ ಭವಿಷ್ಯದ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಇನ್ನೂ ಹೆಚ್ಚಿನ ಸೂಕ್ತ ಕಾಯಿದೆ ಹಾಗೂ ಕಾನೂನಿನ ಅವಶ್ಯಕತೆಯಿದೆ.