ಬೆಂಗಳೂರು :ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರ ವಿರುದ್ಧ ಕನ್ನಡಪರ ಸೇರಿದಂತೆ ವಿವಿಧ ಸಂಘಟನೆಗಳು ಸಮರ ಸಾರಿವೆ. ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿವೆ.
ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಶನಿವಾರ ಸಂಜೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಭಾಗವಹಿಸಿದ್ದರು. ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳ್ಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್ನಿಂದ ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಬಳಿಕ ಬೆಳಗಾವಿ ಕಡೆ ಪ್ರಯಾಣ ಆರಂಭಿಸಲಿದ್ದೇವೆ. ಕಿತ್ತೂರು ರಾಣಿ ಚೆನ್ನಮ್ಮಗೆ ಮಾಲಾರ್ಪಣೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ಇದು ಎಂಇಎಸ್, ಶಿವಸೇನೆ ವಿರುದ್ಧದ ಹೋರಾಟವಾಗಿದೆ ಎಂದು ಪ್ರವೀಣ್ ಶೆಟ್ಟಿ ಹೇಳಿದರು.
ಇದನ್ನೂ ಓದಿರಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಗದ್ದೆಗೆ ಬೆಂಕಿ... 45 ಎಕರೆ ಕಬ್ಬು ಭಸ್ಮ
ಮೈಸೂರು ಬ್ಯಾಂಕ್ ಸರ್ಕಲ್ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ನೆಲಮಂಗಲದಿಂದ ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಹೋಗಲಿದೆ. ಮಾರ್ಗ ಮಧ್ಯೆ ಸಿಗುವ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇವೆ. ಕಾರು, ಬೈಕ್, ಬಸ್, ರೈಲುಗಳ ಮುಖಾಂತರ ಕನ್ನಡಪರ ಕಾರ್ಯಕರ್ತರು ಬೆಳಗಾವಿಯಲ್ಲಿ ಸೇರಿಕೊಳ್ಳಲಿದ್ದಾರೆ. ಸೋಮವಾರ 11 ಗಂಟೆಗೆ ಸುವರ್ಣಸೌಧ ತಲುಪುತ್ತೇವೆ ಎಂದು ಮಾಹಿತಿ ನೀಡಿದರು.
ಬೈಕ್ ರ‌್ಯಾಲಿ:
ಕರವೇ ನಾರಾಯಣಗೌಡ ಬಣದಿಂದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪೀರಣವಾಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಇರುವ ಸ್ಥಳದಿಂದ ಅನಗೋಳದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಸ್ಥಳದವರೆಗೆ ಪ್ರತಿಭಟನಾ ರ‌್ಯಾಲಿ ನಡೆಯಲಿದೆ. 'ನಮ್ಮ ನಡೆ ಅನಗೋಳದ ಕಡೆ' ಎಂಬ ಘೋಷವಾಕ್ಯದಡಿ ರ‌್ಯಾಲಿ ನಡೆಯಲಿದ್ದು, ನಿಷೇಧಾಜ್ಞೆ ಜಾರಿ ಹಿನ್ನೆಲೆ ಈ ರ‌್ಯಾಲಿಗೆ ಪೊಲೀಸರು ತಡೆ ನೀಡುವ ಸಾಧ್ಯತೆ ಇದೆ. ಇಂದು ಬೆಳಗ್ಗೆ 10ಕ್ಕೆ ಪೀರನವಾಡಿ ಗ್ರಾಮದಿಂದ ರ‌್ಯಾಲಿ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.
ಉದ್ವಿಗ್ನ ಪರಿಸ್ಥಿತಿ ನಿರ್ಮಾಣ :ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಅವಮಾನಿಸಿದ ಬೆನ್ನಲೇ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದರು. ಸದ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಕಿಡಿಗೇಡಿಗಳ ವಿರುದ್ಧ ಎಫ್ಐಆರ್ :ಮಾಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಹಿನ್ನೆಲೆಯಲ್ಲಿ ಪ್ರತಿಯಾಗಿ ಕಿಡಿಗೇಡಿಗಳು ಗುರುವಾರ ರಾತ್ರಿ ಭಾಷ್ಯಂ ಸರ್ಕಲ್ನಲ್ಲಿರುವ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.