ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ನಂತರ ದಕ್ಷಿಣದತ್ತ ಪಕ್ಷದ ಕೇಂದ್ರೀಯ ನಾಯಕರ ಚಿತ್ತ ಇರುವ ಕಾರಣ ವರಿಷ್ಠ ನಾಯಕನ ರಾಜ್ಯ ಪ್ರವಾಸ, ಪಕ್ಷ ಹಾಗೂ ಸರ್ಕಾರದಲ್ಲಿ ಬದಲಾವಣೆಗೆ ಕಾರಣವಾಗುತ್ತಾ? ಅನ್ನೋದನ್ನು ಕಾದು ನೋಡಬೇಕು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಬೆಂಗಳೂರು ಭೇಟಿಗೆ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಆರಗ ಜ್ಞಾನೇಂದ್ರ, ವಿ.ಸೋಮಣ್ಣ, ಶ್ರೀರಾಮುಲು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ, ಬೈರತಿ ಬಸವರಾಜ್, ಆನಂದ್ ಸಿಂಗ್, ಶಂಕರ ಪಾಟೀಲ್ ಬಿ.ಮುನೇನಕೊಪ್ಪ, ಸಿ.ಸಿ.ಪಾಟೀಲ್, ಸಂಸದರಾದ ಪಿ.ಸಿ.ಮೋಹನ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ, ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ತೆರಳಿದ್ದು, ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಇಂದು ಸರ್ಕಾರಿ ಕಾರ್ಯಕ್ರಮಗಳ ಜೊತೆ ಪಕ್ಷದ ಚಟುವಟಿಕೆಯಲ್ಲಿಯೂ ಭಾಗಿಯಾಗುತ್ತಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸಂಜೆ 6 ಗಂಟೆಗೆ ನಡೆಯುವ ರಾಜ್ಯ ಕೋರ್ ಕಮಿಟಿ ಸಭೆ ಮಹತ್ವ ಪಡೆದುಕೊಂಡಿದೆ. ಈ ಸಭೆಯಲ್ಲಿ ಅಮಿತ್ ಶಾ, ರಾಜ್ಯದಲ್ಲಿನ ಪ್ರಸಕ್ತ ವಿದ್ಯಮಾನಗಳ ಜೊತೆಗೆ ಪಕ್ಷ ಹಾಗೂ ಸರ್ಕಾರದಲ್ಲಿ ಆಗಬೇಕಿರುವ ಬದಲಾವಣೆಗಳ ಕುರಿತಂತೆಯೂ ಏನಾದರೂ ನಿರ್ದಿಷ್ಟ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಎಲ್ಲ ನಾಯಕರಲ್ಲಿ ಕುತೂಹಲದ ಜೊತೆಗೆ ಆತಂಕವೂ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈಗಾಗಲೇ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯ ವಿಧಾನಮಂಡಲ ಅಧಿವೇಶನ ಎಲ್ಲವೂ ಮುಕ್ತಾಯವಾಗಿದ್ದರಿಂದ ಸಂಪುಟ ಪುನಾರಚನೆ ಮುಂದೂಡಲು ಯಾವುದೇ ಸಕಾರಣವಿಲ್ಲದಿರುವುದರಿಂದ ಯುಗಾದಿ ನಂತರ ಶುಭ ಸುದ್ದಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಸಚಿವಾಕಾಂಕ್ಷಿಗಳು ಕಾಯುತ್ತಿದ್ದಾರೆ. ಈ ಕುರಿತು ಇಂದಿನ ಸಭೆಯಲ್ಲಿ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ಪಷ್ಟ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.