ಬೆಂಗಳೂರು :ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ಎದುರಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲೇ ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ(ಟಿಇಸಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಮಟ್ಟದಲ್ಲಿ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಇರುವಂತೆಯೇ ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ತಜ್ಞರ ಸಮಿತಿ (ಟಿಇಸಿ) ರಚನೆ ಮಾಡಬೇಕು. ಜಿಲ್ಲಾ ಮಟ್ಟದ ತಜ್ಞರ ಸಮಿತಿಯು ಕೇಂದ್ರ ಸರ್ಕಾರ, ಐಸಿಎಂಆರ್, ಏಮ್ಸ್, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳ ಮಾರ್ಗಸೂಚಿಗಳ ಮೇಲೆ ನಿರಂತರವಾಗಿ ನಿಗಾ ವಹಿಸಿ, ಸ್ಥಳೀಯವಾಗಿ ಕೊರೊನಾ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾ ಟಿಇಸಿ ಸಮಿತಿಯು ನಿರಂತರವಾಗಿ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಂಪರ್ಕದಲ್ಲಿದ್ದು, ಅದರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಂಕಿ-ಅಂಶಗಳನ್ನು ಇತರೆ ಜಿಲ್ಲೆ ಹಾಗೂ ರಾಜ್ಯದ ಸರಾಸರಿಯೊಂದಿಗೆ ತಾಳೆ ನೋಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರ ಆಧಾರದ ಮೇಲೆ ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಗಳಿಗಾಗಿ ಸಲಹೆ ನೀಡಬಹುದು ಎಂದು ತಿಳಿಸಲಾಗಿದೆ.