ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸದ ಆರೋಪದಡಿ ನಗರ ಪೊಲೀಸ್ ಆಯುಕ್ತ ಹಾಗೂ ಇತರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಿದ್ದ ನಗರದ 8ನೇ ಎಸಿಎಂಎಂ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ. ಮಾರುತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ಧ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ, ಅರ್ಜಿದಾರರ ಪರ ವಕೀಲರ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಂದ ಯಾವುದೇ ಕರ್ತವ್ಯ ಲೋಪವಾಗಿಲ್ಲ. ದೂರುದಾರರು ದೂರು ಸಲ್ಲಿಸಿದ ವೇಳೆ ಸಂತ್ರಸ್ತೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಸಲಾಗಿದೆ.
ಹಾಗಿದ್ದೂ ಮ್ಯಾಜಿಸ್ಟ್ರೇಟ್ ಕೋರ್ಟ್ ಖಾಸಗಿ ದೂರು ಆಧರಿಸಿ ಅರ್ಜಿದಾರರ ವಿರುದ್ಧ ತನಿಖೆಗೆ ಆದೇಶಿಸಿರುವ ಕ್ರಮ ನ್ಯಾಯ ಸಮ್ಮತವಲ್ಲ. ಆದ್ದರಿಂದ ಕರ್ತವ್ಯ ಲೋಪ ಆರೋಪದಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆ ನಡೆಸುವಂತೆ ಹೊರಡಿಸಿರರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದರು. ವಾದ ಪರಿಗಣಿಸಿದ ಪೀಠ, ಅಧಿಕಾರಿಗಳ ವಿರುದ್ಧದ ತನಿಖೆ ಆದೇಶವನ್ನು ರದ್ದುಪಡಿಸಿ ಆದೇಶಿಸಿತು.