ಬೆಂಗಳೂರು:ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವುದು ಮತ್ತು ಹಿಂಪಡೆಯಲು ಉದ್ದೇಶಿಸಿರುವ ಪ್ರಕರಣಗಳ ಪಟ್ಟಿಯನ್ನು ಅಮಿಕಸ್ ಕ್ಯೂರಿಗೆ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅಮಿಕಸ್ ಕ್ಯೂರಿ ಆದಿತ್ಯ ಸೋಂಧಿ ವಾದಿಸಿ, ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪೆಸಿಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್ ಸಲ್ಲಿಸಬೇಕು. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶ ಮತ್ತು ಮ್ಯಾಜಿಸ್ಟ್ರೇಟ್ ಆದೇಶಗಳನ್ನು ಹೈಕೋರ್ಟ್ ಪರಿಶೀಲಿಸಬಹುದು ಎಂದು ತಿಳಿಸಿದರು.